ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ದಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ: ವಿವಾದಾತ್ಮಕ ವಾಟ್ಸಪ್ ಸ್ಟೇಟಸ್‌ನಿಂದ ನೆರೆಯ ಕೊಲ್ಹಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ದಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಐಪಿಸಿ ಕಲಂ 153ಎ, 295 ಎ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಿಪ್ಪಾಣಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಎಸ್ಪಿ ಡಾ. ಸಂಜೀವ್ ಪಾಟೀಲ್, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.
ಬೂದಿ ಮುಚ್ಚಿದ ಕೆಂಡವಾದ ಕೊಲ್ಹಾಪುರ
ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ರನ್ನು ಹೊಗಳಿ ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ಕೊಲ್ಹಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಗಳ ಕೃತ್ಯ ಸದ್ಯ ಆಕ್ರೋಶಕ್ಕೆ ಕಾರಣವಾಗಿದ್ದು, ಕೊಲ್ಹಾಪುರದಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಅಶ್ರುವಾಯು ಪ್ರಯೋಗಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರ ಹರಸಾಹಸ ಪಟ್ಟಿದ್ದು, ಕೊಲ್ಹಾಪುರ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸದ್ಯ ಕೊಲ್ಹಾಪುರ ನಗರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಹಿಂದೂಪರ ಸಂಘಟನೆಗಳಿಂದ ಬಂಧನಕ್ಕೆ ಆಗ್ರಹ
ಬುಧವಾರ ಹಿಂದೂಪರ ಸಂಘಟನೆಗಳು ಕೊಲ್ಹಾಪುರ ನಗರ ಬಂದ್‌ಗೆ ಕರೆ ನೀಡಿದ್ದರು. ಬೆಳಗ್ಗೆ ಛತ್ರಪತಿ ಶಿವಾಜಿ ಮಹಾರಾಜ ಚೌಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದ ಹಿಂದೂಪರ ಸಂಘಟನೆಗಳು, ಆಕ್ಷೇಪಾರ್ಹ ಪೋಸ್ಟ್ ಮಾಡಿದವರ ಬಂಧನಕ್ಕೆ ಆಗ್ರಹಿಸಿದ್ದಾರೆ.