*ಮೂಡಲಗಿ* : ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ರಷ್ಟು ಪ್ರಮಾಣದಲ್ಲಿ ಮಳೆಯಾಗದೇ ಇರುವದರಿಂದ ಅನೇಕ ಬೆಳೆಗಳು ಒಣಗಿ ಹೋಗುತ್ತಿವೆ. ಇದರಿಂದ ರೈತರು ಸಂಕಷ್ಟದಲ್ಲಿದ್ದು, ಇನ್ನೊಂದು ವಾರದೊಳಗೆ ಮಳೆಯಾಗದಿದ್ದರೆ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಶುಕ್ರವಾರ ಸಂಜೆ ತಾಲೂಕಿನ ಅರಭಾವಿ ಪ್ರವಾಸಿ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಗಸ್ಟ್ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ 32.01 ಎಂಎಂ ಮಳೆ ಆಗಬೇಕಿದ್ದು, ಕೇವಲ 18.3 ಎಂಎಂ ಮಳೆ ಬಿದ್ದಿದೆ. ಅದರಂತೆ ಗೋಕಾಕ ತಾಲೂಕಿನಲ್ಲಿ 29.7 ಎಂಎಂ ವಾಡಿಕೆ ಮಳೆ ಆಗಬೇಕಿತ್ತು. ಕೇವಲ 5.9 ಎಂಎಂ ಮಳೆ ಆಗಿದೆ ಎಂದು ಅವರು ಹೇಳಿದರು.
ಕಬ್ಬು, ಗೋವಿನಜೋಳ, ಸೂರ್ಯಕಾಂತಿ ಬೆಳೆಗಳು ಇನ್ನೊಂದು ವಾರದೊಳಗೆ ಮಳೆ ಕೈಕೊಟ್ಟರೆ ಎಲ್ಲ ಬೆಳೆಗಳು ಒಣಗಿ ಹೋಗುತ್ತವೆ. ಈಗಾಗಲೇ ಹಿಡಕಲ್ ಜಲಾಶಯದಿಂದ ನೀರು ಹರಿದು ಬಿಟ್ಟಿದ್ದರಿಂದ ರೈತರಿಗೆ ಸ್ವಲ್ಪ ಪ್ರಮಾಣದಲ್ಲಿ ಅನುಕೂಲವಾಗಿದೆ. ಆದ್ದರಿಂದ ಬರಪೀಡಿತ ತಾಲೂಕುಗಳೆಂದು ಘೋಷಿಸಲು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ಬಹು ನಿರೀಕ್ಷಿತ ಯೋಜನೆಯಾದ ಜೆಜೆಎಂ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಗಮನಕೊಟ್ಟು ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕ್ಷೇತ್ರಾದ್ಯಂತ ಅಪೂರ್ಣಗೊಂಡ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಕಳಪೆ ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು. ಕಛೇರಿಯಲ್ಲಿ ಕೂಡ್ರದೇ ಎಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆಯೋ ಅಲ್ಲಿಗೆ ತೆರಳಿ ಗುಣಮಟ್ಟದ ಕಾಮಗಾರಿಗಳ ಬಗ್ಗೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವ ಕೆಲಸ ಅಧಿಕಾರಿಗಳು ನಿರ್ವಹಿಸುವಂತೆ ಶಾಸಕರು ಸೂಚನೆ ನೀಡಿದರು.
ಪ್ರಧಾನ ಮಂತ್ರಿ ಆವಾಸ ಯೋಜನೆ, ಅಂಬೇಡ್ಕರ, ಬಸವ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಬಿಲ್ಲುಗಳು ಕೆಲ ಕಾರಣಗಳಿಂದ ತಡೆ ಹಿಡಿದಿದ್ದು ಕೂಡಲೇ ಫಲಾನುಭವಿಗಳಿಗೆ ಬಾಕಿ ಇರುವ ಬಿಲ್ಲುಗಳನ್ನು ಜಮಾ ಮಾಡಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯತ ವ್ಯಾಪ್ತಿಗಳಲ್ಲಿ ಸಮುದಾಯ ಶೌಚಾಲಯಗಳ ನಿರ್ಮಾಣಕ್ಕೆ ಅಧಿಕಾರಿಗಳು ಆಸಕ್ತಿ ತೆಗೆದುಕೊಳ್ಳಬೇಕು. ಈ ಸಂಬಂಧ ಶೌಚಾಲಯಗಳಿಗೆ ನಿವೇಶನಗಳನ್ನು ಗುರುತಿಸುವ ಕೆಲಸವನ್ನು ನಿರ್ವಹಿಸಬೇಕು. ತಿಂಗಳೊಳಗೆ ವಿಶೇಷವಾಗಿ ಮಹಿಳೆಯರಿಗಾಗಿ ಶೌಚಾಲಯಗಳನ್ನು ನಿರ್ಮಿಸಿಕೊಡಲು ಸಂಬಂಧಿಸಿದ ಅಧಿಕಾರಿಗಳು ಕಾಳಜಿ ತೆಗೆದುಕೊಳ್ಳುವಂತೆ ಸೂಚಿಸಿದರು.
ರಾಮೇಶ್ವರ ಏತ ನೀರಾವರಿ ಯೋಜನೆಯ ದುರಸ್ತಿ ಕಾಮಗಾರಿಗಳನ್ನು ಕೈಗೊಂಡು ರೈತ ಸಮೂಹಕ್ಕೆ ಅನುಕೂಲ ಮಾಡಿಕೊಡಬೇಕು. ಕಲ್ಮಡ್ಡಿ ಏತ ನೀರಾವರಿ ಯೋಜನೆಯ ನೀರು ರೈತರಿಗೆ ಸಮರ್ಪಕವಾಗಿ ಪೂರೈಕೆ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಗ್ರಾಮೀಣ ಭಾಗದ ಎಲ್ಲ ಸಾರಿಗೆಗಳನ್ನು ಸಮರ್ಪಕ ವೇಳೆಯಲ್ಲಿ ಓಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಪ್ರತಿ ಗ್ರಾಮ ಪಂಚಾಯತಿಗಳ ಪಿಡಿಓ, ಗ್ರಾಮ ಆಡಳಿತ ಅಧಿಕಾರಿಗಳು ಸ್ಥಾನಿಕವಾಗಿ ಸಾರ್ವಜನಿಕರಿಗೆ ಸಿಗುತ್ತಿಲ್ಲವೆಂಬ ವ್ಯಾಪಕ ದೂರುಗಳು ಬರುತ್ತಿವೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸ್ಥಳೀಯ ಮಟ್ಟದಲ್ಲಿ ಇದ್ದುಕೊಂಡು ಕರ್ತವ್ಯ ನಿರ್ವಹಿಸಬೇಕು. ಮತ್ತೊಮ್ಮೆ ಅಧಿಕಾರಿಗಳ ವಿರುದ್ಧ ದೂರುಗಳು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ, ಗೋಕಾಕ ತಹಶೀಲ್ದಾರ ಮಂಜುನಾಥ ಕೆ, ಮೂಡಲಗಿ ತಾಪಂ ಇಓ ಎಫ್.ಜಿ. ಚಿನ್ನನ್ನವರ, ಗೋಕಾಕ ತಾಪಂ ಇಓ ಮುರಳೀಧರ ದೇಶಪಾಂಡೆ, ಮೂಡಲಗಿ ಸರ್ಕಲ್ ಇನ್ಸ್‍ಪೆಕ್ಟರ್ ಶ್ರೀಶೈಲ್ ಬ್ಯಾಕೋಡ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಂತರ ಮೂಡಲಗಿ, ಗೋಕಾಕ ತಾಲೂಕುಗಳ ಪಿಡಿಓ, ಗ್ರಾಮ ಆಡಳಿತ ಅಧಿಕಾರಿಗಳ ಪ್ರತ್ಯೇಕ ಸಭೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಡೆಸಿದರು.